ಎಂಇಎಸ್ ಪುಂಡರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲ: ರಾಜೀನಾಮೆಗೆ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಆಗ್ರಹ

Udayavani News
0
ಎಂಇಎಸ್ ಪುಂಡರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲ: ರಾಜೀನಾಮೆಗೆ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಆಗ್ರಹ


ಬೆಂಗಳೂರು, ಫೆ, 24; ಬೆಳಗಾವಿ ತಾಲೂಕಿನ ಸಣ್ಣ ಬಾಳೆಕುಂದ್ರಿಯಲ್ಲಿ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಎಂಇಎಸ್ ಪುಂಡರು ನಡೆಸಿದ ಪುಂಡಾಟಿಕೆಯಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಮರಾಠಿ ಪುಂಡರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಆಗ್ರಹಿಸಿದ್ದಾರೆ. 
ಎಂಇಎಸ್ ಪುಂಡರ ಹಾವಳಿ ಹೆಚ್ಚಾಗಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣರಾಗಿದ್ದು, ಮತಬ್ಯಾಂಕ್ ರಾಜಕಾರಣಕ್ಕಾಗಿ ಓಲೈಕೆ ರಾಜಕೀಯದಲ್ಲಿ ತೊಡಗಿದ್ದಾರೆ. ಕನ್ನಡಿಗರ ಹಿತ ರಕ್ಷಣೆ ಮಾಡಲು ಸಾಧ್ಯವಾಗದ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕನ್ನಡಿಗರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ಬೆಳಗಾವಿ ಮತ್ತು ಬೆಂಗಳೂರಿನ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ರಾಜ್ಯದಲ್ಲಿ ಸಚಿವರು ಸಂಚರಿಸಲು ಸಾಧ್ಯವಾಗದಂತೆ ಎಲ್ಲೆಡೆ ಘೇರಾವ್ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 
ಎಂಇಎಸ್ ಪುಂಡರು ಹಲ್ಲೆ ಮಾಡಿದ ಕಾರಣಕ್ಕೆ ಎರಡೂ ರಾಜ್ಯಗಳಲ್ಲಿ ಕಾನೂನು ಪರಿಸ್ಥಿತಿ ಹದಗೆಟ್ಟಿದೆ. ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಆದರೆ ಸರಕು ಸಾಗಾಣೆ ಮತ್ತು ಪ್ರಯಾಣಿಕರ ವಾಹನಗಳು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ಧಾರೆ. ಚಾಲಕರು ಮತ್ತು ಅವರ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ. ಇದೇ ರೀತಿ ಪುಂಡಾಟಿಕೆ ಮುಂದುವರೆದರೆ ನಾವೂ ಕೂಡ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿರುವ ಗಂಡಸಿ ಸದಾನಂದ ಸ್ವಾಮಿ, ಈ ಘಟನೆಯಿಂದ ಸರಕು ಸಾಗಣೆ, ವಾಣಿಜ್ಯ ವಾಹನಗಳ ಚಾಲಕರು ಭೀತಿಯಲ್ಲಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 
ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿದೆ. ಮರಾಠಿ ಪುಂಡರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಮರಾಠಿ ಪುಂಡರ ವಿರುದ್ಧ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಿದ್ದು, ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡುವ ಹಂತಕ್ಕೆ ಅವರು ತಲುಪಿರುವುದು ಖಂಡನೀಯ. ಕರ್ನಾಟಕ ಸುವರ್ಣ ಮಹೋತ್ಸವದಲ್ಲಿದೆ. ಇಂತಹ ಸಂದರ್ಭದಲ್ಲಿ ಕನ್ನಡಿಗರ ಸ್ವಾಭಿಮಾನ ಕೆಣಕುವ ಪ್ರಯತ್ನ ಮುಂದುವರೆಸಿದರೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.

Post a Comment

0Comments

Post a Comment (0)