ಹಠಾತ್ ದಾಳಿ: ಇಟ್ಟಿಗೆ ಭಟ್ಟಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

Udayavani News
0
ರಾಯಚೂರು : ದೇವದುರ್ಗ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರ ಕಾರ್ಯಾಚರಣೆ ನಡೆಸಿ, ದುಡಿಯಲು ಹೋಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಶಾಲೆಗೆ ಸೇರಿಸಿ ಯಶಸ್ವಿ ಕಾರ್ಯಚರಣೆ ಮಾಡಿ ಜನರಿಂದ ಮೆಚ್ಚುಗೆ ಗಳಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರ ತಂಡವು ಇದೀಗ ಮತ್ತೊಂದು ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದೆ.
ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಟಾಸ್ಕ್ ಪೋರ್ಸ್ ಸಮಿತಿ ತಂಡವು ರಾಯಚೂರು ತಾಲೂಕಿನ ಲಿಂಗನಖಾನದೊಡ್ಡಿಯ ಎಸ್.ಆರ್.ಬಿ ಇಟ್ಟಿಗೆ ಭಟ್ಟಿ ಮೇಲೆ ಹಠಾತ್ ದಾಳಿ ನಡೆಸಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಾರ್ಮಿಕ ಮತ್ತು ಒಬ್ಬ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಿದೆ. ಈ ಬಾಲ ಕಾರ್ಮಿಕರನ್ನು ಸರ್ಕಾರಿ ಬಾಲಕಿಯರ ಬಾಲಮಂದಿರ ರಾಯಚೂರ ಅವರಿಗೆ ಒಪ್ಪಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಮೆ.ಎಸ್.ಆರ್.ಬಿ ಇಟ್ಟಿಗೆ ಭಟ್ಟಿಯ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, 1ನೇ ವೃತ್ತ ರಾಯಚೂರನ ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್ ಘನಿ, ಇಡಪನೂರ ಪೊಲೀಸ್ ಇಲಾಖೆಯ ಶಂಕರಗೌಡ, ರಾಯಚೂರ ಮಕ್ಕಳ ಸಹಾಯವಾಣಿ ಘಟಕದ ತಾಯರಾಜ್ ಹಾಗೂ ಲಿಂಗನಖಾನದೊಡ್ಡಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ತಾಯಪ್ಪ ಅವರು ದಾಳಿಯಲ್ಲಿ ಭಾಗಿಯಾಗಿ ಉತ್ತಮ ಕಾರ್ಯ ಮಾಡಿದ್ದಾರೆ.
ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಣೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡಬಹುದಾಗಿದೆ ಎಂದು ಇದೆ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Post a Comment

0Comments

Post a Comment (0)